ಕುಮಾರಸ್ವಾಮಿ ವಿರುದ್ಧ ಅಸಮಾಧಾನ- ದೇವನಹಳ್ಳಿ ಜೆಡಿಎಸ್ ಶಾಸಕ ರಾಜಿನಾಮೆ, ವಿಧಾನಸಭೆ ಚುನಾವಣೆಯಲ್ಲಿ ರಾಮಲಿಂಗಾ ರೆಡ್ಡಿ ಪುತ್ರಿ ಸ್ಪರ್ಧೆ?, ಕೇಂದ್ರದ ವಿರುದ್ಧ ಗುಂಡೂರಾವ್ ಆರೋಪ, ಆಸೀಸ್ ಟೆಸ್ಟ್- ಭಾರತ ಮೇಲುಗೈ

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ವಿರುದ್ಧದ ‘ಸತ್ಯಮೇವ ಜಯತೆ’ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕರಾದ ಪರಮೇಶ್ವರ್, ದಿನೇಶ್ ಗುಂಡೂರಾವ್, ಕೆ.ಜೆ ಜಾರ್ಜ್, ರಾಮಲಿಂಗಾ ರೆಡ್ಡಿ ಹಾಗೂ ಇತರರು.

ಡಿಜಿಟಲ್ ಕನ್ನಡ ಟೀಮ್:

ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಪಿಳ್ಳಮುನಿಶಾಮಪ್ಪ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಗುರುವಾರ ಬೆಳಗ್ಗೆ ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅವರನ್ನು ಭೇಟಿ ಮಾಡಿ ರಾಜಿನಾಮೆ ಸಲ್ಲಿಸಿದ್ದಾರೆ. ‘ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಅವರ ನಡವಳಿಕೆಯಿಂದ ಬೇಸತ್ತಿದ್ದೇನೆ. ಅಷ್ಟೇ ಅಲ್ಲದೆ ಕ್ಷೇತ್ರದಲ್ಲಿ ಅವರ ಹಸ್ತಕ್ಷೇಪ ಹೆಚ್ಚಾಗಿದೆ’ ಎಂದು ಹನ್ನೊಂದು ಕಾರಣಗಳನ್ನು ನೀಡಿ ರಾಜಿನಾಮೆ ನೀಡಿ, ಅದನ್ನು ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ಇದರೊಂದಿಗೆ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆ ಏರಬೇಕು ಎಂಬ ಜೆಡಿಎಸ್ ಪಕ್ಷದ ಪ್ರಯತ್ನಕ್ಕೆ ಮತ್ತೊಂದು ಆಘಾತ ಎದುರಾದಂತಾಗಿದೆ.

ರಾಮಲಿಂಗಾ ರೆಡ್ಡಿ ಪುತ್ರಿ ಕಣಕ್ಕೆ?

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪುತ್ರಿ ಸೌಮ್ಯ ರೆಡ್ಡಿ ಸ್ಪರ್ಧಿಸಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ‘ಸೌಮ್ಯ ಈಗಾಗಲೇ ರಾಜಕೀಯ ಪ್ರವೇಶ ಮಾಡಿ, ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಪಕ್ಷ ಟಿಕೆಟ್ ನೀಡಿದರೆ ತಮ್ಮ ನೆರೆಹೊರೆ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರೆ’ ಎಂದು ಸಚಿವರು ತಿಳಿಸಿದ್ದಾರೆ. ಇದೇ ವೇಳೆ ಇತ್ತೀಚೆಗೆ ನಡೆದ ಬಸ್ ಅಗ್ನಿ ದುರಂತದ ಹಿನ್ನೆಲೆಯಲ್ಲಿ ‘ಇನ್ನು ಮುಂದೆ ಸರ್ಕಾರಿ ಹಾಗೂ ಖಾಸಗಿ ಬಸ್ ಗಳು, ಲಾರಿ ಮತ್ತು ಶಾಲಾ ಬಸ್ ಗಳಲ್ಲಿ ಕಡ್ಡಾಯವಾಗಿ ಅಗ್ನಿಶಾಮಕ ಉಪಕರಣಗಳನ್ನು ಅಳವಡಿಸಬೇಕು’ ಎಂದು ಹೇಳಿದ್ದಾರೆ.

ಕೇಂದ್ರದ ವಿರುದ್ಧ ದಿನೇಶ್ ಗುಂಡೂರಾವ್ ಆರೋಪ

ರಾಜ್ಯದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಆ ಕಾರಣದಿಂದ ಆದಾಯ ತೆರಿಗೆ ಇಲಾಖೆಗಳ ಮೂಲಕ ಪಕ್ಷದ ಸಚಿವರು ಮತ್ತು ಶಾಸಕರ ಮನೆ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ನಗರದ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ವಿರುದ್ಧದ ಸತ್ಯಮೇವ ಜಯತೆ ಎಂಬ ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಕಾಂಗ್ರೆಸ್ ಹೈಕಮಾಂಡಿಗೆ ಹಣ ನೀಡಿದೆ ಎಂಬ ಸುಳ್ಳು ಆರೋಪ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪನವರು ನಗೆಪಾಟಲಿಗೆ ಗುರಿಯಾಗಿದ್ದಾರೆ. ಈ ಆರೋಪದ ಬಗ್ಗೆ ದಾಖಲೆ ಇದ್ದರೆ ಬಿಡುಗಡೆ ಮಾಡಲಿ’ ಎಂದು ಸವಾಲೆಸೆದರು.

ಮೊದಲ ಟೆಸ್ಟ್: ಕಂಗಾಲಾದ ಕಾಂಗರೂ ಪಡೆ

ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಮೊದಲ ದಿನದ ಗೌರವ ಸಂಪಾದಿಸಿದೆ. ಪುಣೆಯ ಎಂಸಿಎ ಮೈದಾನದಲ್ಲಿ ಗುರುವಾರ ಆರಂಭವಾದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಉತ್ತಮ ಆರಂಭದ ಹೊರತಾಗಿಯೂ ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ನಲುಗಿದ ಆಸ್ಟ್ರೇಲಿಯಾ ದಿನದಾಟ ಮುಕ್ತಾಯಕ್ಕೆ 9 ವಿಕೆಟ್ ಕಳೆದುಕೊಂಡು 256 ರನ್ ದಾಖಲಿಸಿದೆ. ಆಸ್ಟ್ರೇಲಿಯಾ ತಂಡದ ಪರ ಆರಂಭಿಕ ಆಟಗಾರ ರೆನ್ ಶಾ (68) ಹಾಗೂ ಸ್ಟಾರ್ಕ್ (ಅಜೇಯ 57) ಆಕರ್ಷಕ ಬ್ಯಾಟಿಂಗ್ ಪ್ರವಾಸಿ ತಂಡಕ್ಕೆ ಆಧಾರವಾಗಿದೆ.

ಸಂಕ್ಷಿಪ್ತ ಸ್ಕೋರ್: ಆಸ್ಟ್ರೇಲಿಯಾ ಮೊದಲ ಇನಿಂಗ್ಸ್ 256ಕ್ಕೆ 9 (94 ಓವರ್)

ರೆನ್ ಶಾ 68, ಸ್ಟಾರ್ಕ್ ಅಜೇಯ 57, ವಾರ್ನರ್ 38, ಸ್ಮಿತ್ 27 (ಉಮೇಶ್ ಯಾದವ್ 32ಕ್ಕೆ 4, ಅಶ್ವಿನ್ 59ಕ್ಕೆ 2, ಜಡೇಜಾ 74ಕ್ಕೆ 2, ಜಯಂತ್ 58ಕ್ಕೆ 1)

Leave a Reply