ಬರ ಪರಿಸ್ಥಿತಿ ನಿರ್ವಹಣೆಗಾಗಿ ನಾಳೆ ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ವಿಡಿಯೋ ಸಂವಾದ

ಡಿಜಿಟಲ್ ಕನ್ನಡ ಟೀಮ್:

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ಎದುರಿಸುವ ನಿಟ್ಟಿನಲ್ಲಿ ಆಡಳಿತ ಯಂತ್ರಕ್ಕೆ ಚುರುಕು ತರಲು ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ದಿನವಿಡೀ ವಿಡಿಯೋ ಸಂವಾದ ನಡೆಸಲಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಯಿಂದ ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಸಂವಾದ ಆರಂಭವಾಗಲಿದ್ದು, ಎಲ್ಲ ಜಿಲ್ಲಾಧಿಕಾರಿಗಳನ್ನು ಪ್ರತ್ಯೇಕವಾಗಿ ಸಂಪರ್ಕಿಸುವ ಮೂಲಕ ಆಯಾ ಜಿಲ್ಲೆಗಳಲ್ಲಿ ಬರ ನಿರ್ವಹಣೆಗೆ ಕೈಗೊಂಡಿರುವ ಕ್ರಮ, ರೈತರು ಮತ್ತು ಜನರ ಸಮಸ್ಯೆಗಳಿಗೆ ಜಿಲ್ಲಾಡಳಿತದ ಸ್ಪಂದನೆ ಸೇರಿದಂತೆ ಇತರೆ ಮಾಹಿತಿ ಪಡೆಯಲಿದ್ದಾರೆ.

ರಾಜ್ಯದ ಕೆಲವೆಡೆ ಕುಡಿಯುವ ನೀರಿಗೆ ತೀವ್ರ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಕುಡಿಯುವ ನೀರಿನ ಪೂರೈಕೆ, ಬರ ಪರಿಹಾರ ಕಾಮಗಾರಿ ಪ್ರಗತಿ, ಬೆಳೆ ಕಳೆದುಕೊಂಡ ರೈತರಿಗೆ ಪರಿಹಾರ ವಿತರಿಕೆ ಕುರಿತು ತೆಗೆದುಕೊಂಡಿರುವ ಕ್ರಮಗಳ ಪರಿಶೀಲನೆ ನಡೆಸಲಿದ್ದಾರೆ. ಇನ್ನು ಗೋಶಾಲೆ ಆರಂಭ, ಜಾನುವಾರುಗಳಿಗೆ ಮೇವು ಖರೀದಿ ಹಾಗೂ ಪೂರೈಕೆ, ಮೇವು ಬ್ಯಾಂಕ್ ಗಳ ಸ್ಥಾಪನೆ ಸೇರಿದಂತೆ ಇನ್ನು ಆಗಬೇಕಿರುವ ತುರ್ತು ಕೆಲಸಗಳ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಲಿದ್ದಾರೆ.

ಬರ ನಿರ್ವಹಣೆ ವಿಚಾರವಾಗಿ ಪ್ರತಿಪಕ್ಷಗಳು ಸರ್ಕಾರದ ಮೇಲೆ ಟೀಕಾ ಪ್ರಹಾರ ನಡೆಸುತ್ತಿರುವ ಹಿನ್ನೆಲೆಯಲ್ಲಿ ವಾಸ್ತವ ಸಂಗತಿ ಅರಿಯಲು ಜಿಲ್ಲಾಧಿಕಾರಿಗಳೊಂದಿಗೆ ಈ ಸಂವಾದ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ಅಷ್ಟೇ ಅಲ್ಲದೆ ರಾಜ್ಯದ ಜಲಾಶಯಗಳಲ್ಲಿನ ನೀರಿನ ಮಟ್ಟ, ಜನರಿಗೆ ಕುಡಿಯಲು ಬಳಕೆಯಾಗುವ ನೀರು, ಕೊಳವೆ ಬಾವಿ ಕೊರೆಸುವುದು ಹಾಗೂ ಅವುಗಳ ನಿರ್ವಹಣೆ, ಕೆರೆಗಳ ಹೂಳೆತ್ತುವಿಕೆ ಸೇರಿದಂತೆ ಇತರೆ ವಿಷಯಗಳನ್ನು ಚರ್ಚಿಸಲಿದ್ದಾರೆ.

Leave a Reply