ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ವಿಶೇಷ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಚಿಂತನೆ

ಡಿಜಿಟಲ್ ಕನ್ನಡ ಟೀಮ್:

‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತ್ವರಿತ ವಿಚಾರಣೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಿ…’ ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ.

ದೌರ್ಜನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಟ್ಟದ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಈ ಸಮುದಾಯದವರ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆಗೆ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವ ಸಂಬಂಧ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುವಂತೆ ಸಮಾಜ ಕಲ್ಯಾಣ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವರಿಗೆ ಸೂಚನೆ ನೀಡಿದರು. ಈ ವೇಳೆ ಅವರು ಹೇಳಿದ ಮಾತುಗಳು ಹೀಗಿತ್ತು…

‘ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು. ಇದಕ್ಕೆ ಪೂರಕವಾದ ಕ್ರಮಗಳನ್ನು ಪ್ರಾಸಿಕ್ಯುಷನ್, ಪೊಲೀಸರು ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕೈಗೊಳ್ಳಬೇಕು. ಎಲ್ಲ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ದೌರ್ಜನ್ಯ ಪ್ರಕರಣಗಳಲ್ಲಿ ಹಿನ್ನೆಡೆಯಾಗುತ್ತಿದ್ದು, ತಪ್ಪಿತಸ್ಥರು ಶಿಕ್ಷೆಯಿಂದ ಬಚಾವಾಗುತ್ತಿದ್ದಾರೆ. ಅದಕ್ಕೆ ಅವಕಾಶ ಕೊಡದೆ ಸಾಕ್ಷ್ಯಾಧಾರ ಮತ್ತು ಸಾಕ್ಷಿ ಒದಗಿಸುವ ಕೆಲಸ ಆಗಬೇಕು. ವಜಾಗೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಸುವ ಪ್ರಕ್ರಿಯೆ ಚುರುಕಾಗಬೇಕು. ಮೇಲ್ಮನವಿ ಸಲ್ಲಿಕೆಗೆ ಅರ್ಹವಾದ ಪ್ರಕರಣಗಳ ಕುರಿತು ಅಧಿಕಾರಿಗಳು ಆಗಿಂದಾಗ್ಗೆ ಪರಿಶೀಲನೆ ನಡೆಸಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರು ಹಾಗೂ ಅವರಿಗೆ ಸಹಕಾರ ನೀಡಿದ ಅಧಿಕಾರಿಗಳಿಗೂ ತಕ್ಕ ಶಿಕ್ಷೆ ಆಗಬೇಕು.’

Leave a Reply