ಹಿರಿಯ ಪತ್ರಕರ್ತ ಗರುಡನಗಿರಿ ನಾಗರಾಜ್ ನಿಧನ

ಡಿಜಿಟಲ್ ಕನ್ನಡ ಟೀಮ್:

ಹಿರಿಯ ಪತ್ರಕರ್ತ ಹಾಗೂ ಮಾಧ್ಯಮ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಗರುಡನಗಿರಿ ನಾಗರಾಜ (85 ವರ್ಷ) ಅವರು ಭಾನುವಾರ ಬೆಳಗಿನ ಜಾವ 2.55ರ ವೇಳೆಗೆ ನಿಧನರಾಗಿದ್ದಾರೆ.

ಗರುಡನಗಿರಿ ನಾಗರಾಜ ಅವರು ಜನವಾಣಿ ಪತ್ರಿಕೆಯಿಂದ ವೃತ್ತಿ ಜೀವನವನ್ನು ಆರಂಭಿಸಿದ್ದರು. ನಂತರ ಕನ್ನಡಪ್ರಭ ಪತ್ರಿಕೆಯ ಹಿರಿಯ ವರದಿಗಾರರಾಗಿ ಸುಮಾರು ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ನಂತರ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಕೆಲ ಕಾಲ ಕರ್ಮವೀರ ವಾರಪತ್ರಿಕೆ ಹಾಗೂ ಕಸ್ತೂರಿ ಮಾಸಪತ್ರಿಕೆಯ ಸಂಪಾದಕರಾಗಿದ್ದರು.

ನಾಗರಾಜ ಅವರಿಗೆ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ಮತ್ತು ಟಿಯೆಸ್ಸಾರ್ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಸಿಕ್ಕಿವೆ. ಮೃತರು ಪತ್ನಿ, ಪುತ್ರಿ, ಪುತ್ರ ಹಾಗೂ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಭಾನುವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ 2 ರವರೆಗೆ ಅವರ ಜೆ.ಪಿ. ನಗರ 3ನೇ ಹಂತದ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗುವುದು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

Leave a Reply