ಮೋದಿಯವರು ದೇಶದ ಕಾವಲುಗಾರನಲ್ಲ, ಭ್ರಷ್ಟಾಚಾರದ ಭಾಗೀದಾರ: ಸಿದ್ದರಾಮಯ್ಯ

100

ಡಿಜಿಟಲ್ ಕನ್ನಡ ಟೀಮ್:

‘ಪ್ರಧಾನಿ ನರೇಂದ್ರ ಮೋದಿಯವರು ದೇಶದ ಕಾವಲುಗಾರನಲ್ಲ, ಅವರು ಭ್ರಷ್ಟಾಚಾರದ ಪಾಲುದಾರ…’ ಇದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಿಡಿ ನುಡಿ.

ಬೀದರ್ ನಲ್ಲಿ ಸೋಮವಾರ ಆಯೋಜಿಸಿದ್ದ ಕಾಂಗ್ರೆಸ್ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು ಮೋದಿ ವಿರುದ್ಧ ತೀಕಾಪ್ರಹಾರ ನಡೆಸಿದರು. ಸಿದ್ದರಾಮಯ್ಯ ಅವರ ಮಾತಿನ ವರಸೆ ಹೀಗಿತ್ತು…

‘ನಾಲ್ಕು ವರ್ಷಗಳ ಬಳಿಕ ಕೇಂದ್ರದ ಬಿಜೆಪಿ ಸರ್ಕಾರದ ಬಂಡವಾಳ ಬಯಲಾಗಿದೆ. ಎಲ್ಲ ರಂಗಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ವಿಫಲವಾಗಿದೆ.

ಸುಳ್ಳು ಭರವಸೆ ಮತ್ತು ಅಪ ಪ್ರಚಾರದ ಮೂಲಕ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದ ಬಗ್ಗೆ ಜನ ಭ್ರಮನಿರಸನಗೊಂಡಿದ್ದಾರೆ. ನರೇಂದ್ರ ಮೋದಿ ಅವರು ಈ ದೇಶದ ಕಾವಲುಗಾರನಲ್ಲ. ಭ್ರಷ್ಟಾಚಾರದ ಭಾಗೀದಾರ. ಅವರ ಕುಮ್ಮಕ್ಕಿನಿಂದಲೇ ದೇಶದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಸುಳ್ಳು ಭರವಸೆಗಳ ಮೂಲಕ ದೇಶದ ಜನರನ್ನು ಮೂರ್ಖರನ್ನಾಗಿ ಮಾಡಲು ಹೋದ ಮೋದಿ ಅವರಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ ರಾಹುಲ್ ಗಾಂಧಿಯವರು ಪ್ರಧಾನಿ ಆಗಲಿದ್ದಾರೆ. ಬಳಿಕ ಅವರು ರೈತರ ಸಾಲ ಮನ್ನಾ ಮಾಡಲಿದ್ದಾರೆ.

ಪ್ರಧಾನಿಯವರ ಮನ್ ಕೀ ಬಾತ್ ನಿಂದ ಬಡವರ ಹೊಟ್ಟೆ ತುಂಬುವುದಿಲ್ಲ. ಅವರಿಗೆ ಬೇಕಿರುವುದು ಕಾಮ್ ಕೀ ಬಾತ್. ದಲಿತರ ಬಗ್ಗೆ ಮೋದಿಯವರಿಗೆ ಕಾಳಜಿ ಇದ್ದರೆ ಅವರಿಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಎಸ್ ಸಿಪಿ, ಟಿಎಸ್ ಪಿ ಕಾಯಿದೆಯನ್ನು ದೇಶವ್ಯಾಪಿ ಜಾರಿಗೆ ತರಲಿ.

ಕೇವಲ ಮೂಗಿಗೆ ತುಪ್ಪ ಸವರುವುದರಿಂದ ದಲಿತರು, ರೈತರ ಉದ್ಧಾರ ಆಗದು. ಅವರ ಕಲ್ಯಾಣಕ್ಕೆ ಕಾರ್ಯಕ್ರಮ ಜಾರಿಗೆ ತರಬೇಕು. ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರುವ ಏಕೈಕ ಪಕ್ಷ ಕಾಂಗ್ರೆಸ್. ವಿಧಾನಸಭೆ ಚುನಾವಣೆಯಲ್ಲಿ ಬೀದರ್ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ ತಂದುಕೊಟ್ಟ ಮತದಾರರಿಗೆ ಕೃತಜ್ಞತೆಗಳು.

ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ತಂದುಕೊಟ್ಟದ್ದು ಕೇಂದ್ರದಲ್ಲಿದ್ದ ಯುಪಿಎ ಸರ್ಕಾರ. ಬಿಜೆಪಿಯಿಂದ ಆ ಕೆಲಸ ಆಗಲಿಲ್ಲ. ಕಾಂಗ್ರೆಸ್ ಸಾಮಾಜಿಕ ನ್ಯಾಯದ ಕಳಕಳಿಗೆ ಬಲ ಬರಬೇಕಾದರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತದಾರರು ಪಕ್ಷಕ್ಕೆ ಆಶೀರ್ವಾದ ಮಾಡುವ ಮೂಲಕ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡಬೇಕು.’

Leave a Reply