ನೆರೆ ಪರಿಹಾರ: ಶೀಘ್ರದಲ್ಲೇ ಕೇಂದ್ರ ತಂಡ ಕಳುಹಿಸಲು ಮೋದಿ ಸಮ್ಮತಿ

ಡಿಜಿಟಲ್ ಕನ್ನಡ ಟೀಮ್:

ಈ ಬಾರಿಯ ಮುಂಗಾರಿನಲ್ಲಿ ಕೊಡಗು ಸೇರಿದಂತೆ ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಸಂಭವಿಸಿದ ಹಾನಿಯನ್ನು ಸಮೀಕ್ಷೆ ಮಾಡಲು ಶೀಘ್ರದಲ್ಲೇ ಕೇಂದ್ರ ಸರ್ಕಾರವು ಅಧಿಕಾರಿಗಳ ಎರಡು ತಂಡಗಳನ್ನು ಕಳುಹಿಸುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಾರೆ.

ಅತಿವೃಷ್ಟಿಯಿಂದ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸಾವಿರಾರು ಕೋಟಿ ಮೌಲ್ಯದ ಆಸ್ತಿ ನಷ್ಟವಾಗಿದ್ದು, ಇದಕ್ಕಾಗಿ ಕೇಂದ್ರದಿಂದ ಪರಿಹಾರ ಕೇಳಲು ಇಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ರಾಜ್ಯ ಸರ್ಕಾರದ ನಿಯೋಗವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತ್ತು. ಈ ಭೇಟಿ ವೇಳೆ ನೆರೆಯ ಜಿಲ್ಲೆಗಳಿಗೆ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಿಗಾಗಿ 2000 ಕೋಟಿ ರೂ. ಗಳ ಪ್ಯಾಕೇಜ್ ಘೋಷಿಸಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು.

ರಾಜ್ಯದ ನಿಯೋಗವನ್ನು ಭೇಟಿ ಮಾಡಿದ ನರೇಂದ್ರ ಮೋದಿ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಮೂಲಗಳು ಮಾಹಿತಿ ನೀಡಿವೆ.

ಕೊಡಗು ಮತ್ತು ನೆರೆಯ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಸತತ ಭಾರಿ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಉಂಟಾಗಿ ಜನ-ಜಾನುವಾರುಗಳು ಜೀವ ಕಳೆದುಕೊಂಡಿದ್ದು, ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ಆಗಸ್ಟ್ 2 ನೇ ವಾರದಲ್ಲಿ ಕಳೆದ 118 ವರ್ಷಗಳಲ್ಲೇ ದಾಖಲೆ ಮಳೆ ಸುರಿದಿದ್ದರಿಂದ ಅಪಾರ ನಷ್ಟ ಸಂಭವಿಸಿದ್ದು, ಕೃಷಿ, ತೋಟಗಾರಿಕೆ ಹಾಗೂ ವಾಣಿಜ್ಯಬೆಳೆಗಳಿಗೆ, ಮೂಲಸೌಕರ್ಯ, ಮನೆಗಳಿಗೆ ತೀವ್ರ ಹಾನಿಯುಂಟಾಗಿದೆ. ಅತಿವೃಷ್ಟಿಯಿಂದಾಗಿ ಈ ಜಿಲ್ಲೆಗಳಲ್ಲಿ ಒಟ್ಟು 3705.87 ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಪುನರ್ವಸತಿ ಮತ್ತು ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕೊಡಗು ಮತ್ತಿತರ ಜಿಲ್ಲೆಗಳಿಗೆ 2000 ರೂಪಾಯಿಗಳ ಪ್ಯಾಕೇಜ್ ಘೋಷಿಸಿ ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ನಿಯೋಗ ಮನವಿ ಸಲ್ಲಿಸಿತು.

ಇನ್ನು ಕರ್ನಾಟಕದ ಒಳನಾಡಿನಲ್ಲಿ 17 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, ಈ ಕುರಿತೂ ಸಹ ನಷ್ಟದ ಪ್ರಮಾಣ ಅಂದಾಜು ಮಾಡಲಾಗುತ್ತಿದ್ದು, ಈ ಕುರಿತು ನಾಳೆ ಸಂಪುಟ ಉಪಸಮಿತಿ ಸಭೆ ನಡೆಸಿ ಪ್ರಸ್ತಾವನೆಯನ್ನು ಅಂತಿಮಗೊಳಿಸಲಿದೆ. ಅದರಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ನಿಯೋಗವು ಪ್ರಧಾನಿಯವರಿಗೆ ಮಾಹಿತಿ ನೀಡಿತು.

ಈ ಎಲ್ಲ ಮನವಿಗಳನ್ನು ಆಲಿಸಿದ ಮೋದಿ, ಕರ್ನಾಟಕದಲ್ಲಿನ ನೆರೆ ಹಾಗೂ ಬರ ಪರಿಸ್ಥಿತಿ ಅಧ್ಯಯನಕ್ಕಾಗಿ ಕೇಂದ್ರದ ಅಧಿಕಾರಿಗಳ ಎರಡು ತಂಡವನ್ನು ಕಳುಹಿಸಲು ನಿರ್ಧರಿಸಿದ್ದಾರೆ.

ಈ ನಿಯೋಗದಲ್ಲಿ ಮಾಜಿ ಪ್ರಧಾನಿ ಹಾಗೂ ಹಾಸನ ಸಂಸದ ಹೆಚ್.ಡಿ.ದೇವೇಗೌಡ, ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಕಂದಾಯ ಸಚಿವ ಆರ್. ವಿ.ದೇಶಪಾಂಡೆ, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಗ್ರಾಮೀಣಾಭಿ ವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಮುಖ್ಯಮಂತ್ರಿ ಗಳೊಂದಿಗೆ ನಿಯೋಗದಲ್ಲಿ ಇದ್ದರು.

Leave a Reply