ಬಿಎಸ್‍ವೈ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ, ಮಿಂಚಿನ ಪ್ರತಿಭಟನೆ

ಡಿಜಿಟಲ್ ಕನ್ನಡ ಟೀಮ್:

ಆಪರೇಷನ್ ಕಮಲಕ್ಕೆ ಪ್ರಯತ್ನ ಮಾಡಿ ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆಂದು ಆರೋಪಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸದ ಎದಿರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಆರಂಭಸಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯ ಯಡಿಯೂರಪ್ಪ ನಿವಾಸದ ಮುಂದೆ ದಿಢೀರ್ ಜಮಾಯಿಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಯಡಿಯೂರಪ್ಪ ಹಾಗೂ ಅಮಿತ್ ಶಾ ವಿರುದ್ಧ ಘೋಷಣೆ ಹಾಕಿದರು.

ಸುಗಮವಾಗಿ ನಡೆದುಕೊಂಡು ಹೋಗುತ್ತಿರುವ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಯಡಿಯೂರಪ್ಪನವರು ಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಇಂತಹ ಕೀಳು ಮಟ್ಟದ ರಾಜಕಾರಣವನ್ನು ನಿಲ್ಲಿಸಿ ಉತ್ತಮ ಪ್ರತಿಪಕ್ಷವಾಗಿ ಕೆಲಸ ಮಾಡಬೇಕು ಎಂದು ಆಗ್ರಹಿಸಿದ ಕಾರ್ಯಕರ್ತರು, ಡೌನ್ ಡೌನ್ ಯಡಿಯೂರಪ್ಪ, ಡೌನ್ ಡೌನ್ ಬಿಜೆಪಿ, ಯಡಿಯೂರಪ್ಪ ಮತ್ತು ಬಿಜೆಪಿಗೆ ಧಿಕ್ಕಾರ ಎಂದು ಘೋಷಣೆ ಹಾಕಿದರು.

ಇದೇ ವೇಳೆ ಯಡಿಯೂರಪ್ಪ ಅವರೊಂದಿಗೆ ಸಮಾಲೋಚನೆಯಲ್ಲಿ ತೊಡಗಿದ್ದ ಬಿಜೆಪಿ ಶಾಸಕರಾದ ಎಸ್.ಆರ್.ವಿಶ್ವನಾಥ, ಎಂ.ಪಿ.ರೇಣುಕಾಚಾಯ, ರವಿಕುಮಾರ್ ಸೇರಿದಂತೆ ಹಲವರು ಹೊರಬಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರತಿಭಟನೆ ಕೈಬಿಡುವಂತೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತರು ಮತ್ತು ಬಿಜೆಪಿ ಶಾಸಕರ ನಡುವೆ ವಾಕ್ಸಮರ ಮತ್ತು ಆರೋಪ ಪ್ರತ್ಯಾರೋಪಗಳು ನಡೆದವು. ಮೊದಲು ನಿಮ್ಮ ನಾಯಕರಿಗೆ ಕೆಟ್ಟ ರಾಜಕಾರಣ ಬಿಡುವಂತೆ ಬುದ್ಧಿವಾದ ಹೇಳಿ ಎಂದು ಕಾರ್ಯಕರ್ತರು ಆಗ್ರಹಿಸಿದರು.

ಈ ವೇಳೆ ಆರೋಪ-ಪ್ರತ್ಯಾರೋಪಗಳು ಮುಂದುವರಿದು ಕಾಂಗ್ರೆಸ್ ಕಾರ್ಯಕರ್ತರು ಯಡಿಯೂರಪ್ಪ ಅವರ ಮನೆಗೆ ನುಗ್ಗಲು ಪ್ರಯತ್ನಿಸಿದರಾದರೂ ಪೊಲೀಸರು ತಡೆದರು. ಪೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಯಾಯಿತು. ನಂತರ ಕಾರ್ಯಕರ್ತರನ್ನು ಕಳುಹಿಸಿದರು.

Leave a Reply