ವಿದ್ಯಾರ್ಥಿಗಳ ಶಿಕ್ಷಣ ಸಾಲವೂ ಮನ್ನಾ!? ಈ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿ ಮನದ ಮಾತೇನು?

ಡಿಜಿಟಲ್ ಕನ್ನಡ ಟೀಮ್:

ಬಡ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಡೆದಿರುವ ಸಾಲವನ್ನು ಮನ್ನಾ ಮಾಡುವ ಬಗ್ಗೆ ರಾಜ್ಯ ಕಾಂಗ್ರೆಸ್, ಜೆಡಿಎಸ್ ದೋಸ್ತಿ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಂಗಳವಾರ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಈ ವಿಚಾರವಾಗಿ ಮಾತನಾಡಿದ್ದು, ‘ಉನ್ನತ ವ್ಯಾಸಂಗಕ್ಕಾಗಿ ಸಾಲ ಮಾಡಿದ ಬಡ ವಿದ್ಯಾರ್ಥಿಗಳಿಗೆ ವ್ಯಾಸಂಗ ಬಳಿಕ ಉದ್ಯೋಗ ಸಿಗದೆ ಸಾಲ ತೀರಿಸಲು ಸಾಧ್ಯವಾಗದ ಬಡ ಕುಟುಂಬಗಳ ಮಾಹಿತಿಯನ್ನು ಸಿದ್ದಪಡಿಸಿ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ’ ಎಂದು ತಿಳಿಸಿದರು.

ರಾಜ್ಯದೆಲ್ಲೆಡೆಯಿಂದ ಈ ಮಾಹಿತಿಯನ್ನು ಸಂಗ್ರಹಿಸಿದ ಬಳಿಕ ಶೈಕ್ಷಣಿಕ ಸಾಲ ಮನ್ನಾದ ಸಾಧಕ-ಬಾಧಕಗಳನ್ನು ಪರಿಶೀಲನೆ ನಡೆಸಲಾಗುವುದು. ಬಳಿಕ ಸಮರ್ಪಕವಾಗಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜನತಾ ದರ್ಶನದಲ್ಲಿ ಶೈಕ್ಷಣಿಕ ಸಾಲದ ಬಗ್ಗೆ ಹಲವು ಮಂದಿ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ವೃತ್ತಿಪರ ಶಿಕ್ಷಣ ಮುಗಿದ ಬಳಿಕ ಉದ್ಯೋಗ ಸಿಗದೆ ಸಾಲವನ್ನು ತೀರಿಸಲು ಸಾಧ್ಯವಾಗದೆ ಸಂಕಷ್ಟ ಅನುಭವಿಸುತ್ತಿರುವ ಕುಟುಂಬಗಳು ತಮ್ಮ ನೋವನ್ನು ಹೇಳಿಕೊಂಡಿದ್ದಾರೆ. ಹೀಗಾಗಿ ಶೈಕ್ಷಣಿಕ ಸಾಲದ ಬಗ್ಗೆ ಮಾಹಿತಿ ಪಡೆದು ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಯಾವುದೇ ಒಂದು ಸಮುದಾಯಕ್ಕೆ ಸಿಮೀತವಾಗದೆ ಎಲ್ಲಾ ವರ್ಗದ ವಿದ್ಯಾರ್ಥಿಗಳ ಸಾಲದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುವುದು ಎಂದರು.

ರಾಜ್ಯದಲ್ಲಿ ಹೆಚ್ಚಾಗಿರುವ ಮೀಟರ್ ಬಡ್ಡಿ ದಂಧೆ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಉಪವಿಭಾಗಧಿಕಾರಿಗೆ ಅಧಿಕಾರ ನೀಡಲು ನಿರ್ಧಾರ ಮಾಡಲಾಗಿದೆ. ಮೊದಲು ಸಹಕಾರ ಇಲಾಖೆಗೆ ಮಾತ್ರ ಅಧಿಕಾರ ಇದ್ದು, ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿರಲಿಲ್ಲ. ಪೊಲೀಸರಿಗೆ ಅಧಿಕಾರ ನೀಡುವ ಬಗ್ಗೆ ಚರ್ಚಿಸಲಾಯಿತು. ಆದರೆ, ಪೊಲೀಸರಿಗೆ ಅಧಿಕಾರ ನೀಡಿದರೆ ಅಧಿಕಾರ ದುರುಪಯೋಗ ಸಾಧ್ಯತೆ ಹೆಚ್ಚಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾದವು. ಹೀಗಾಗಿ ಉಪವಿಭಾಗಧಿಕಾರಿ ಸೂಚನೆ ಮೇರೆಗೆ ಪೊಲೀಸರು ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವಂತೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ರಾಜ್ಯ ಸರ್ಕಾರ ಟೇಕಾಫ್ ಆಗಿಲ್ಲ ಎಂಬುದಾಗಿ ಪ್ರತಿಪಕ್ಷ ಬಿಜೆಪಿ ಅಪಪ್ರಚಾರ ನಡೆಸುತ್ತಿದೆ. ಶಿಕ್ಷಣ ಇಲಾಖೆ, ಲೋಕೋಪಯೋಗಿ ಇಲಾಖೆ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿಯೂ ಉತ್ತಮವಾಗಿ ಕೆಲಸ ಮಾಡಲಾಗುತ್ತಿದೆ. ಪ್ರತಿಪಕ್ಷಗಳು ಇದನ್ನು ಸರಿಯಾಗಿ ಗಮನಿಸಬೇಕು ಎಂದು ತಿರುಗೇಟು ನೀಡಿದ ಅವರು, ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳ ಕಟ್ಟಡಗಳ ದುರಸ್ತಿಗೆ ೧೨೦೦ ಕೋಟಿ ರು. ಒದಗಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಗೆ ೨೯ ಸಾವಿರ ಕೋಟಿ ರು. ಹಂಚಿಕೆ ಮಾಡಿ ವಸತಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಉಪಯೋಜನೆಯ ಹಣವನ್ನು ಖರ್ಚು ಮಾಡದ ಅಧಿಕಾರಿಗಳನ್ನು ಶಿಕ್ಷಿಸಲು ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಇದಲ್ಲದೇ, ಲೋಕೋಪಯೋಗಿ ಇಲಾಖೆಯಲ್ಲಿ ೧೨ ಸಾವಿರ ಕೋಟಿ ರು. ನಷ್ಟು ರಸ್ತೆ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಗೊಳ್ಳಲಾಗಿದೆ. ಸಣ್ಣ ನೀರಾವರಿ ಇಲಾಖೆಯಿಂದ ಅಭಿವೃದ್ಧಿಗಾಗಿ ೫೦೦ ಕೋಟಿ ರು. ಬೇಡಿಕೆ ಇದ್ದು, ಅದನ್ನು ನೀಡಲು ಸರ್ಕಾರದ ಬದ್ಧವಾಗಿದೆ ಎಂದು ಸರ್ಕಾರದ ಯೋಜನೆಗಳನ್ನು ತಿಳಿಸಿದರು.

Leave a Reply