ಬಿಜೆಪಿ ಮಹಿಳಾ ಮೋರ್ಚಾ ರಾಷ್ಟ್ರೀಯ ಸಮಾವೇಶಕ್ಕೆ ರಾಜ್ಯದ 600 ಕಾರ್ಯಕರ್ತೆಯರು

ಡಿಜಿಟಲ್ ಕನ್ನಡ ಟೀಮ್:

ಇದೇ ತಿಂಗಳು 21ರಿಂದ 23ರವರೆಗೂ ಗುಜರಾತಿನ ಅಹ್ಮದಾಬಾದ್ ನಲ್ಲಿ ಬಿಜೆಪಿ ರಾಷ್ಟ್ರೀಯ ಮಹಿಳಾ ಮೋರ್ಚಾ ಸಮಾವೇಶ ನಡೆಯಲಿದ್ದು ರಾಜ್ಯ ಬಿಜೆಪಿ ಮಹಿಳಾ ಘಟಕದಿಂದ ಸುಮಾರು 600 ಸದಸ್ಯೆಯರು ಭಾಗವಹಿಸಲಿದ್ದಾರೆ.

ಈ ಕುರಿತು ಮಂಗಳವಾರ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷೆ ಭಾರತಿ ಶೆಟ್ಟಿ ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ‘ರಾಷ್ಟ್ರೀಯ ಸಮಾವೇಶಕ್ಕೆ ರಾಜ್ಯ ಮಹಿಳಾ ಘಟಕದ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮತ್ತೂ ಪಂಚಾಯಿತಿ ಸದಸ್ಯೆಯರು, ಬಿಜೆಪಿ ಶಾಸಕಿಯರು ಹಾಗೂ ಸಂಸದೆಯರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದ್ದಾರೆ.

ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಹಬ್ಬಿಸುತ್ತಿರುವ ಸುಳ್ಳು ಪ್ರಚಾರ ಯತ್ನವನ್ನು ವಿಫಲಗೊಳಿಸುವ ಮೂಲಕ 2019ರ ಚುನಾವಣೆಯಲ್ಲಿ ಮತ್ತೇ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಲು ನೀಲಿ ನಕ್ಷೆ ರೂಪಿಸಲು ಈ ಸಮಾವೇಶ ಆಯೋಜಿಸಲಾಗಿದೆ.

21ರಂದು ಸಂಜೆ 4 ಗಂಟೆಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಮಾವೇಶ ಉದ್ಘಾಟಿಸಲಿದ್ದು, ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಹಾಗೂ ಅವರ ಸರ್ಕಾರದ ಪ್ರಮುಖ ಸಚಿವರು, ಕೇಂದ್ರ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು 22ರಂದು ಸಂಜೆ 5 ಗಂಟೆಗೆ ನಡೆಯಲಿರುವ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿ ಮಾತನಾಡಲಿದ್ದಾರೆ.

23ರಂದು ದೇಶದ ಮೂಲೆ ಮೂಲೆಗಳಿಂದ ಆಗಮಿಸುವ ಮಹಿಳಾ ಪ್ರತಿನಿಧಿಗಳು ಸರ್ದಾರ್ ಪಟೇಲರ ಏಕತೆ ಪ್ರತಿಮೆಗೆ ಭೇಟಿ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply