ಸಿಬಿಐಗೆ ಟೆಲಿಫೋನ್ ಕದ್ದಾಲಿಕೆ ಪ್ರಕರಣ

ಡಿಜಿಟಲ್ ಕನ್ನಡ ಟೀಮ್:

ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿ ವಿವಾದ ಸೃಷ್ಟಿಸಿದ್ದ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಪತ್ರಕರ್ತರ ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಲು ನಿರ್ಧರಿಸಿದೆ. ಈ ಬಗ್ಗೆ ನಾಳೆ ಅಧಿಕಾರಿಗಳ ಜತೆ ಸಭೆ ನಡೆಸಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಸರ್ಕಾರದ ಈ ನಡೆಯಿಂದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮ್ಮಿಶ್ರ ಸರ್ಕಾರದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಹಾಲಿ ಕೆಎಸ್ ಆರ್‍ಪಿ ಎಡಿಜಿಪಿ ಅಲೋಕ್‍ಕುಮಾರ್, ಐಎಎಸ್ ಅಧಿಕಾರಿಗಳು, ಐಪಿಎಸ್ ಅಧಿಕಾರಿಗಳು, ಎಸಿಪಿ, ಇನ್‍ಸ್ಪೆಕ್ಟರ್‍ಗಳು ಸೇರಿದಂತೆ ಮತ್ತಿತರರಿಗೆ ಕಾನೂನಿನ ಸಂಕಷ್ಟ ಎದುರಾಗಿದೆ.

ಭಾನುವಾರ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ , ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಲಾಗಿದೆ. ನಾಳೆ ಮತ್ತೊಮ್ಮೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಅಧಿಕೃತವಾಗಿ ಸಿಬಿಐ ತನಿಖೆಗೆ ಆದೇಶ ಹೊರಡಿಸುವುದಾಗಿ ತಿಳಿಸಿದರು.

ಸಮ್ಮಿಶ್ರ ಸರ್ಕಾರದ ವಿರುದ್ಧ ಕದ್ದಾಲಿಕೆ ಆರೋಪ ಕೇಳಿಬಂದ ನಂತರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರ ಟೆಲಿಫೋನ್ ಕದ್ದಾಲಿಕೆ ಪ್ರಕರಣವನ್ನು ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದರು. ತಪಿತಸ್ಥರು ಯಾರೇ ಇರಲಿ ಅವರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು. ಹೀಗಾಗಿ ಸಿಬಿಐ ತನಿಖೆಗೆ ಆದೇಶ ನೀಡಲಾಗಿದೆ. ಕಾನೂನಿನ ಪ್ರಕಾರ ತಪ್ಪು ಮಾಡಿದವರು ಶಿಕ್ಷೆಗೆ ಗುರಿಯಾಗಲಿದ್ದಾರೆ ಎಂದರು.

Leave a Reply