ಡಿಜಿಟಲ್ ಕನ್ನಡ ಟೀಮ್:
ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಆರೋಪ ಹೊತ್ತು ಜೈಲು ಸೇರಿದ್ದ ಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂಗೆ ಇಂದು ಸುಪ್ರೀಂಕೋರ್ಟ್ ಜಾಮೀನು ನೀಡಿ ಆದೇಶ ಹೊರಡಿಸಿದೆ.
ನವೆಂಬರ್ 15ರಂದು ಚಿದಂಬರಂ ಅರ್ಜಿ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿತ್ತು. ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂ ಪ್ರಮುಖ ಪಾತ್ರ ವಹಿಸಿದ್ದು, ಅವರಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು. ನಂತರ ಚಿದಂಬರಂ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು.
ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಆರ್. ಭಾನುಮತಿ, ಎ.ಎಸ್. ಬೋಪಣ್ಣ ಮತ್ತು ಹೃಷಿಕೇಶ್ ರಾಯ್ ಅವರ ನ್ಯಾಯಪೀಠ ಇಂದು ತೀರ್ಪು ಪ್ರಕಟಿಸಿ, 2 ಲಕ್ಷ ರೂ. ಬಾಂಡ್, ಇಬ್ಬರ ಶ್ಯೂರಿಟಿಯೊಂದಿಗೆ ಜಾಮೀನು ಮಂಜೂರು ಮಾಡಿದೆ.
ಇದರೊಂದಿಗೆ ಚಿದಂಬರಂ ಅವರ 106 ದಿನಗಳ ತಿಹಾರ್ ಜೈಲು ವಾಸ ಸದ್ಯಕ್ಕೆ ಅಂತ್ಯವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಾರ್ವಜನಿಕ ಹೇಳಿಕೆ ನೀಡುವುದಾಗಲೀ ಅಥವಾ ಸುದ್ದಿಗೋಷ್ಠಿ ನಡೆಸುವುದಾಗಲಿ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಪಿ. ಚಿದಂಬರಂಗೆ ನಿರ್ದೇಶನ ನೀಡಿದೆ. ಅನುಮತಿ ಇಲ್ಲದೆ ದೇಶ ಬಿಡುವಂತಿಲ್ಲ ಎಂಬ ಷರತ್ತನ್ನೂ ವಿಧಿಸಿದೆ.