ಪಿಯುಸಿ ಇಂಗ್ಲೀಷ್, SSLC ಪರೀಕ್ಷೆ ದಿನಾಂಕ ಪ್ರಕಟ!

ಡಿಜಿಟಲ್ ಕನ್ನಡ ಟೀಮ್:

ಲಾಕ್ಡೌನ್ ಹಿನ್ನೆಲೆಯಲ್ಲಿ ಬಾಕಿ ಉಳಿದಿದ್ದ ಪಿಯುಸಿ ಇಂಗ್ಲೀಷ್ ಪರೀಕ್ಷೆ ಸೇರಿದಂತೆ ಎಸ್ಎಸ್ಎಲ್ಸಿ ಪರೀಕ್ಷೆ ದಿನಾಂಕವನ್ನು ಸರ್ಕಾರ ಸೋಮವಾರ ಪ್ರಕಟಿಸಿದೆ.

ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ ನಿರ್ಧಾರ ಪ್ರಕಟಿಸಿದ್ದು, ಜೂನ್ 25ರಿಂದ ಜುಲೈ 4ರವರೆಗೆ 10ನೇ ತರಗತಿ ಪರೀಕ್ಷೆಗಳು ನಡೆಯಲಿವೆ. ಹಾಗೇ, ಜೂನ್ 18ಕ್ಕೆ ಪಿಯುಸಿಯ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ ಎಂದಿದ್ದಾರೆ.

‘ಈಗಾಗಲೇ ಚಂದನ ವಾಹಿನಿಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪುನರ್ಮನನ ಆರಂಭಿಸಲಾಗಿದೆ. ಇಂಗ್ಲಿಷ್, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆಗಳಿಗೆ ಒಂದೊಂದು ದಿನ ಅಂತರವನ್ನು ನೀಡಲಾಗಿದೆ. ಸದ್ಯದಲ್ಲೇ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ 1 ತಿಂಗಳು ಮುಂಚಿತವಾಗಿ ಪರೀಕ್ಷೆ ದಿನಾಂಕವನ್ನು ಪ್ರಕಟಿಸಲಾಗಿದೆ’ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪರೀಕ್ಷೆ ಮೌಲ್ಯಮಾಪನಕ್ಕೆ 1 ತಿಂಗಳು ಬೇಕಾಗುತ್ತದೆ. ನಂತರ ಪೂರಕ ಪರೀಕ್ಷೆ ನಡೆಸಲಾಗುವುದು. ಶಾಲೆಗಳ ಪ್ರಾರಂಭದ ಬಗ್ಗೆ ಚರ್ಚೆ ನಡೆಯುತ್ತಿದೆ. ಪರೀಕ್ಷೆ ನಡೆಯುವ ಶಾಲೆಗಳ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

‘ಒಟ್ಟು 2879 ಶಾಲೆಗಳ 43,720 ಕೊಠಡಿಗಳಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ಪರೀಕ್ಷಾ ಸಮಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸಲಾಗುವುದು. ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಮಾಸ್ಕ್ ಧರಿಸುವುದು ಕಡ್ಡಾಯ. ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಮಾಸ್ಕ್ ವ್ಯವಸ್ಥೆ ಮಾಡಲಾಗುವುದು. ಪ್ರತಿ ವಿದ್ಯಾರ್ಥಿಗೆ 2 ಮಾಸ್ಕ್ ನೀಡಲಾಗುವುದು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಲಾಗಿದ್ದು, ಪ್ರತಿ ನಿತ್ಯ ಆರೋಗ್ಯ ಇಲಾಖೆಯಿಂದ ಎಲ್ಲ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಲಾಗುವುದು. ಒಂದು ವೇಳೆ ವಿದ್ಯಾರ್ಥಿಗೆ ಆರೋಗ್ಯ ಸಮಸ್ಯೆ ಇದ್ದರೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು’ ಎಂದು ಸಚಿವರು ತಿಳಿಸಿದ್ದಾರೆ.

Leave a Reply