ಡಿಜಿಟಲ್ ಕನ್ನಡ ಟೀಮ್:
ರಾಜ್ಯದಿಂದ ಖಾಲಿಯಾಗಲಿರುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಲಾಗಿದೆ.
ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಅವರು ಈ ಕುರಿತು ನಿರ್ಧಾರ ಪ್ರಕಟಿಸಿದ್ದು, ಪಕ್ಷದ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಿದೆ.
ಖರ್ಗೆ ಅವರು ಅಭ್ಯರ್ಥಿಯಾಗಲು ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಒಪ್ಪಿ, ಅನುಮತಿ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮುಕುಲ್ ವಾಸ್ನಿಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.